50 ಲಕ್ಷ ರೂಪಾಯಿ ಮೌಲ್ಯದ ಬಂಗಾರ ಮತ್ತು 6 ಲಕ್ಷ ನಗದು ಹಣ ಕಳ್ಳತನ

50 ಲಕ್ಷ ರೂಪಾಯಿ ಮೌಲ್ಯದ ಬಂಗಾರ ಮತ್ತು 6 ಲಕ್ಷ ನಗದು ಹಣ ಕಳ್ಳತನ

ಪ್ರತಿಷ್ಠಿತ ಹೋಟೆಲ್ ಉದ್ಯಮಿ ಮನೆಗೆ ಕನ್ನ – ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ದೋಚಿದ ಖದೀಮರು

ಹುಬ್ಬಳ್ಳಿ: ನಗರದ ಕೇಶ್ವಾಪುರ ಪೊಲೀಸ್ ಠಾಣೆ ಸಮೀಪದ ನವೀನ್ ಪಾರ್ಕ್ ಪ್ರದೇಶದಲ್ಲಿ ಭಾರಿ ಮನೆ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಪ್ರತಿಷ್ಠಿತ ಹೋಟೆಲ್ ಉದ್ಯಮಿ ಬಾಲಕೃಷ್ಣ ಶೆಟ್ಟಿ ಅವರ ಮನೆಯಲ್ಲಿ ಕಳ್ಳರು ಕನ್ನ ಹಾಕಿ ಸುಮಾರು 50 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 6 ಲಕ್ಷ ರೂಪಾಯಿ ನಗದು ಹಣವನ್ನು ದೋಚಿರುವುದಾಗಿ ತಿಳಿದುಬಂದಿದೆ.

ಬಾಲಕೃಷ್ಣ ಶೆಟ್ಟಿ ಅವರ ಕುಟುಂಬ ಎರಡು ದಿನಗಳ ಹಿಂದೆ ಮಗಳ ಕಾಲೇಜು ದಾಖಲಾತಿ ಕಾರ್ಯಕ್ಕಾಗಿ ಬೆಂಗಳೂರಿಗೆ ತೆರಳಿದ್ದು, ಮನೆಗೆ ಬೀಗ ಹಾಕಿ ಹೋಗಿದ್ದರು. ಈ ವೇಳೆ ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ ದುಷ್ಕರ್ಮಿಗಳು ಮನೆಗೆ ನುಗ್ಗಿ ಕಳ್ಳತನ ನಡೆಸಿರುವ ಶಂಕೆ ವ್ಯಕ್ತವಾಗಿದೆ.

ಕಳ್ಳತನವಾದ ನಗದು ಹಣವನ್ನು ಮಗಳ ಉನ್ನತ ಶಿಕ್ಷಣಕ್ಕಾಗಿ ಕುಟುಂಬವು ಕೂಡಿಟ್ಟಿಟ್ಟಿತ್ತು ಎನ್ನಲಾಗಿದೆ. ಘಟನೆ ಕೇಶ್ವಾಪುರ ಪೊಲೀಸ್ ಠಾಣೆಯಿಂದ ಕೂಗಳತೆಯ ದೂರದಲ್ಲೇ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ, ಬೆರಳಚ್ಚು ತಜ್ಞರ ತಂಡ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಸಾಕ್ಷ್ಯ ಸಂಗ್ರಹ ಕಾರ್ಯ ಕೈಗೊಂಡಿದ್ದಾರೆ.

ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿದಿದೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಕಳ್ಳರ ಸುಳಿವು ಹುಡುಕುತ್ತಿದ್ದಾರೆ.